ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ಹೊಸ 11 ವೈದ್ಯಕೀಯ ಕಾಲೇಜು ನಿರ್ಮಾಣ

ಮಂಗಳೂರು : ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದೆ. ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ.

ಸದ್ಯ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 11 ಜಿಲ್ಲೆಗಳಲ್ಲಿ ಕಾಲೇಜುಗಳಿಲ್ಲ. ಆದ್ದರಿಂದ ಸರ್ಕಾರ ಹೊಸ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಮುಂದಾಗಿದೆ. ಹೊಸ ಕಾಲೇಜುಗಳ ಸ್ಥಾಪನೆಗೆ ಆರ್ಥಿಕ ಇಲಾಖೆ ಅನುಮೋದನೆ ಕೇಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಹೊಸ ಕಾಲೇಜುಗಳು ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಆರಂಭವಾಗಲಿವೆ.


ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ನನಸು ಮಾಡಬೇಕು ಎಂದು ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಬೇಕು ಎಂದು ಗುರಿ ಹೊಂದಲಾಗಿದೆ. ಆದ್ದರಿಂದ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.


ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಕೋರ್ಸ್ ಅಧ್ಯಯನ ಮಾಡಲು ಅವಕಾಶ ಸಿಗಬೇಕು. ಗ್ರಾಮೀಣ ಭಾಗದ ಜನರಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತಿದೆ ಎಂದರು.


ಕರ್ನಾಟಕದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಅಂದರೆ 71 ವೈದ್ಯಕೀಯ ಕಾಲೇಜುಗಳಿವೆ. ಇವುಗಳ ಜೊತೆಗೆ ಈ ವರ್ಷ ಪಿಇಎಸ್, ಬಿಜಿಎಸ್ ಮತ್ತು ಎಸ್. ಆರ್. ಪಾಟೀಲ್ ವೈದ್ಯಕೀಯ ಕಾಲೇಜುಗಳು ಸೇರ್ಪಡೆಯಾಗಿವೆ. ಎಲ್ಲವನ್ನೂ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಅಸಾಧ್ಯ. ಖಾಸಗಿಯವರ ಸಹಕಾರ ಸಹ ಅಷ್ಟೇ ಮುಖ್ಯ ಎಂದು ಸಚಿವರು ಹೇಳಿದರು.

ಕರ್ನಾಟಕ ಸರ್ಕಾರವು ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದೆ. 'ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು' ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ ಎಂದು ಹೇಳಿದೆ.

'ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ' ಎಂದು ಪೋಸ್ಟ್‌ನಲ್ಲಿ ಮಾಹಿತಿ ನೀಡಿದೆ.

ಸರ್ಕಾರದ ಮಾಹಿತಿ ಪ್ರಕಾರ ಈಗಾಗಲೇ ಎರಡು ವೈದ್ಯಕೀಯ ಕಾಲೇಜುಗಳಿಗೆ ನಿವೇಶನ ಹಂಚಿಕೆ ಮತ್ತು ಇತರೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ. ದಾವಣಗೆರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎರಡು ವೈದ್ಯಕೀಯ ಕಾಲೇಜುಗಳು ಶೀಘ್ರವೇ ಕಾರ್ಯಾರಂಭ ಮಾಡಲಿವೆ.

2013ರ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು. 2014-15ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರವು ಪ್ರತಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿತ್ತು. ಆದರೆ, ಕೆಲವು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣಗೊಂಡಿಲ್ಲ. ಈಗ ಮತ್ತೆ ಕಾಂಗ್ರೆಸ್ ಸರ್ಕಾರ ತನ್ನ ಹಿಂದಿನ ಅವಧಿಯ ಘೋಷಣೆಯನ್ನು ಜಾರಿಗೊಳಿಸಲು ಮುಂದಾಗಿದೆ.