→ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.
→ ಇಂದಿನಿಂದ ಡಿಸೆಂಬರ್ 12ರವರೆಗೆ ರಾಜ್ಯದಲ್ಲಿ ಶೋಕಾಚರಣೆ ಘೋಷಣೆ - ಮೂರುದಿನಗಳ ಕಾಲ ರಾಜ್ಯದಲ್ಲಿ ಯಾವುದೇ ಸರ್ಕಾರಿ ಹಾಗೂ ಮನರಂಜನಾ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾಳೆ ಬೆಳಿಗ್ಗೆ 8ಗಂಟೆಯವರೆಗೆ ಎಸ್.ಎಂ.ಕೃಷ್ಣ ಅವರ ಸದಾಶಿವ ನಗರ ನಿವಾಸದಲ್ಲಿಯೇ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಪಾರ್ಥಿವ ಶರೀರ ಕೊಂಡೊಯ್ಯಲಾಗುವುದು. ಅಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದರು.
ಮೂರುದಿನಗಳ ಕಾಲ ರಾಜ್ಯದಲ್ಲಿ ಯಾವುದೇ ಸರ್ಕಾರಿ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯುವುದಿಲ್ಲ. ಇಂದಿನಿಂದ ಡಿಸೆಂಬರ್ 12ರವರೆಗೆ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಬುಧವಾರ ಸರಕಾರಿ ರಜೆ ಘೋಷಿಸಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಅಧಿಸೂಚನೆ
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ.ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.
ಮುಂದುವರೆದು ದಿವಂಗತರ ಅಂತ್ಯಕ್ರಿಯೆಯನ್ನು ໖:11.12.20240 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು.