ಈಗಾಗಲೇ ಇತ್ಯರ್ಥಗೊಂಡಿದೆ ಎಂಬ ಕಾರಣಕ್ಕೆ ಅದನ್ನು ನ್ಯಾಯಾಲಯ ಒಪ್ಪಿಕೊಳ್ಳಬೇಕು ಎಂದೇನಿಲ್ಲ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಹೇಳಿದೆ.
ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಒಪ್ಪಿಗೆ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.
ಯತ್ನಾಳ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ. ಪರಮೇಶ್ವರ್, 'ಸಿಬಿಐ ಪೂರ್ಣ ತನಿಖೆ ನಡೆಸಿದ ನಂತರವೂ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಲಾಗಿದೆ. ಸಿಬಿಐ ತನಿಖೆಯ ಅನುಮತಿ ಹಿಂಪಡೆದಿರುವುದು ದುಷ್ಕೃತ್ಯ. ಶಿವಕುಮಾರ್ ಅವರು ಸಂಪುಟದ ಸದಸ್ಯರಾಗಿರುವುದರಿಂದ ಲೋಕಾಯುಕ್ತದವರು ಮುಕ್ತಾಯದ ವರದಿ ಸಲ್ಲಿಸುವ ಸಾಧ್ಯತೆ ಇದೆ. ಆಗ ಇಡೀ ಪ್ರಕ್ರಿಯೆ ನಿಷ್ಪ್ರಯೋಜಕ ಆಗುತ್ತದೆ' ಎಂದು ವಾದಿಸಿದರು. ಆಗ ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಬೇರೆ ನ್ಯಾಯಾಲಯದಲ್ಲಿ ಇರುವುದರಿಂದ ಇನ್ನೊಂದು ದಿನ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಸಿಬಿಐ ವಕೀಲರು ಮನವಿ ಮಾಡಿದರು. ಇದಕ್ಕೆ ಪೀಠ ಒಪ್ಪಿತು. ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಬೇಕು ಎಂದು ಸಿಬಿಐ ವಕೀಲರು ಮನವಿ ಮಾಡಿದರು.
ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೋರಿದರು. ಪ್ರಕರಣದ ವಿಚಾರಣೆಯನ್ನು ಜನವರಿ 22ಕ್ಕೆ ನ್ಯಾಯಪೀಠ ಮುಂದೂಡಿತು.
ಯತ್ನಾಳ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. 'ಕೇಂದ್ರ ಸರ್ಕಾರವು ಎಲ್ಲಿಯವರೆಗೆ ರಾಜ್ಯವೊಂದರಲ್ಲಿ ಸಿಬಿಐ ಅನ್ನು ಕಾರ್ಯನಿರ್ವಹಣೆಗೆ ಹಚ್ಚಬಹುದು ಎಂಬುದು ಕಾನೂನಿನ ವಿಚಾರಕ್ಕೆ ಒಳಪಟ್ಟಿದೆ. ಈ ಪ್ರಕರಣದಲ್ಲಿನ ಕಾನೂನಿನ ವಿಚಾರಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸಂಬಂಧಿಸಿವೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವೆ ಸಂಘರ್ಷ ಇದ್ದು ಪ್ರಕರಣವನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸುವುದೇ ಸೂಕ್ತ' ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಬಿಜೆಪಿ ಸರ್ಕಾರವು ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ 2019ರ ಸೆಪ್ಟೆಂಬರ್ 25ರಂದು ಅನುಮತಿ ನೀಡಿತ್ತು. ಈ ಅನುಮತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರ 2023ರ ನವೆಂಬರ್ 23ರಂದು ಹಿಂಪಡೆದಿತ್ತು. ನಂತರ 2023ರ ಡಿಸೆಂಬರ್ 28ರಂದು ಲೋಕಾಯುಕ್ತ ತನಿಖೆಗೆ ವಹಿಸಿತ್ತು.