ಕಡಬ ಮಸೀದಿಯಲ್ಲಿ 'ಜೈ ಶ್ರೀರಾಮ್' ಘೋಷಣೆ ಪ್ರಕರಣ | ಆರೋಪಿಗಳ ಮೇಲಿನ ಎಫ್‌ಐಆರ್ ರದ್ದು ಪಡಿಸಿದ ಕರ್ನಾಟಕ ಹೈಕೋರ್ಟ್ - ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ ಕೂಗಿದ್ದಕ್ಕಾಗಿ ಇಬ್ಬರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ನ 2024ರ ಸೆಪ್ಟೆಂಬರ್ 13ರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.
ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಕರಣವನ್ನು ರದ್ದುಗೊಳಿಸುವ ವೇಳೆ "ಯಾರಾದರೂ ಜೈ ಶ್ರೀರಾಮ್ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುತ್ತಿಲ್ಲ.
ಆ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸಾಮರಸ್ಯ ವಾಸಿಸುತ್ತಿದ್ದಾರೆ ಎಂದು ದೂರುದಾರರೇ ಹೇಳಿದ್ದಾರೆ" ಎಂದು ಹೇಳಿದ್ದರು.
2023 ರ ಸೆಪ್ಟೆಂಬರ್ 25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಗೆ ಹೈದರ್ ಅಲಿ ಸಿಎಂ ಅವರು ಸಲ್ಲಿಸಿದ ದೂರಿನ ಮೇರೆಗೆ ಕೀರ್ತನ್ ಕುಮಾರ್ ಮತ್ತು ಸಚಿನ್ ಕುಮಾರ್ ಎನ್ ಎಂ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.