ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇಲೆ ಬಂಧಿತರಾಗಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ನಿನ್ನೆ ಸಂಜೆ ಪೊಲೀಸರು ಬಂಧಿಸಿದ್ದರು.
ಆರೋಪಿ ಪೊಲೀಸ್ ಅಧಿಕಾರಿಯನ್ನು ಇಂದು ಮಧುಗಿರಿ ಜೆಎಂಎಫ್ಸಿ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪೊಲೀಸ್ ಠಾಣೆಯಲ್ಲೇ ಮಹಿಳೆ ಜತೆ ರಾಸಲೀಲೆ: ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಬಂಧನ
ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲು ಆದೇಶಿಸಲಾಗಿದೆ.
ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದೆ.